ಮೂಡುಬಿದಿರೆ: ಅಯೋಧ್ಯೆಯ ರಾಮಮಂದಿರದಲ್ಲಿ ಹುಂಡಿ ದೇಣಿಗೆ ಹಣ ಕಳವಾಗಿರುವ ಪ್ರಕರಣವು ಭಕ್ತರ ಧಾರ್ಮಿಕ ನಂಬಿಕೆಗೆ ಧಕ್ಕೆ ತಂದಿರುವ ಗಂಭೀರ ಪ್ರಕರಣವಾಗಿದ್ದು, ಇದರ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಪದ್ಮ ಪ್ರಸಾದ್ ಜೈನ್ ಒತ್ತಾಯಿಸಿದರು.
ರಾಮಮಂದಿರ ನಿರ್ಮಾಣಕ್ಕಾಗಿ ದೇಶದ ಪ್ರತಿಯೊಂದು ಜಿಲ್ಲೆ, ತಾಲೂಕು ಹಾಗೂ ಗ್ರಾಮಗಳಿಂದ ಭಕ್ತರು ದೇಣಿಗೆ ನೀಡಿದ್ದಾರೆ. ದೇಶದ ಜನರ ನಂಬಿಕೆಯಿಂದ ನಿರ್ಮಾಣಗೊಂಡಿರುವ ದೇವಾಲಯದಲ್ಲೇ ದೇಣಿಗೆ ಹಣ ಕಳವಾಗಿರುವುದು ದರೋಡೆಗೆ ಸಮಾನವಾಗಿದೆ ಎಂದು ಅವರು ಆರೋಪಿಸಿದರು.
ರಾಮಮಂದಿರ ಟ್ರಸ್ಟ್‌ನ ಚಂಪತ್ ರಾಯ್ ಹಾಗೂ ಕರ್ನಾಟಕ ಮೂಲದ ಆಡಳಿತ ಮುಖ್ಯಸ್ಥ ಗೋಪಾಲ್ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು, ಅವರನ್ನು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಎಣಿಕೆ ಕಾರ್ಯದಲ್ಲಿ ತೊಡಗಿದ್ದ ಕೆಲ ನೌಕರರನ್ನು ಮಾತ್ರ ಬಂಧಿಸಲಾಗಿದ್ದು, ದೊಡ್ಡ ಮಟ್ಟದ ಜವಾಬ್ದಾರಿಯಲ್ಲಿರುವವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಹಗರಣ ನಡೆದಿರುವ ಆರೋಪ ಇದ್ದರೂ ಸಿಬಿಐ , ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಯಾವುದೇ ತನಿಖೆ ಆರಂಭಿಸದಿರುವುದು ಅನುಮಾನಕ್ಕೆ ಕಾರಣವಾಗಿದೆ. ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕಾದರೆ ಸರ್ವೋಚ್ಚ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ದೇಶದ ಪ್ರಧಾನಿಯವರು ಈ ವಿಚಾರದಲ್ಲಿ ಮೌನ ವಹಿಸಿರುವುದೇಕೆ ಎಂಬ ಪ್ರಶ್ನೆಯನ್ನೂ ಅವರು ಎತ್ತಿದರು. ರಾಜ್ಯ, ಜಿಲ್ಲೆ ಹಾಗೂ ಸ್ಥಳೀಯ ಮಟ್ಟದ ಬಿಜೆಪಿ ಮುಖಂಡರು ಕೂಡ ಈ ಕುರಿತು ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ಆಗ್ರಹಿಸಿದರು.
ರಾಮಮಂದಿರ ನಿರ್ಮಾಣಕ್ಕೆ ದೇಶದ ಎಲ್ಲ ವರ್ಗದ ಜನರು ದೇಣಿಗೆ ನೀಡಿದ್ದು, ಆ ಹಣದ ಬಳಕೆಯ ಬಗ್ಗೆ ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ. ಈ ಹಣ ಎಲ್ಲಿಗೆ ಹೋಗಿದೆ ಎಂಬುದನ್ನು ದೇಶದ ಜನತೆಗೆ ತಿಳಿಸಬೇಕು ಎಂದು ಅವರು ಹೇಳಿದರು.
ಒಂದು ವೇಳೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಸರ್ಕಾರ ಅಥವಾ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಿದ್ದರೆ, ಇಂತಹ ಪ್ರಕರಣದ ಬಗ್ಗೆ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿತ್ತು. ಆದರೆ ಈಗ ಆಯ್ದ ವಿಷಯಗಳಿಗೆ ಮಾತ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದು ಸರಿಯಲ್ಲ. ಎಲ್ಲ ವಿಷಯಗಳಲ್ಲೂ ಸಮಾನ ನಿಲುವು ಇರಬೇಕು ಎಂದು ಅವರು ಅಭಿಪ್ರಾಯಪಟ್ಟರು.
ತಾವು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ರಾಮಭಕ್ತರಾಗಿದ್ದು, ಕಾಂಗ್ರೆಸ್ ಪಕ್ಷದ ವಕ್ತಾರರೂ ಆಗಿರುವುದರಿಂದ ಹಾಗೂ ದೇಶದ ಪ್ರಜೆಯಾಗಿ ಈ ವಿಚಾರವನ್ನು ಪ್ರಶ್ನಿಸುವ ಹಕ್ಕು ಹೊಂದಿದ್ದೇನೆ ಎಂದು ಹೇಳಿದರು.
ಈ ಕುರಿತು ರಾಜ್ಯ ಮಟ್ಟದಲ್ಲಿ ಪಕ್ಷದ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಲಾಗಿದೆ. ಇದೀಗ ವಿಧಾನಸಭಾ ಕ್ಷೇತ್ರ ಮಟ್ಟದಲ್ಲೂ ಪತ್ರಿಕಾಗೋಷ್ಠಿ ನಡೆಸಿ, ಮುಂದಿನ ಹೋರಾಟದ ರೂಪರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕುಮಾರ್ ಪೂಜಾರಿ ಇರುವೈಲು, ಮೂಡಾ ಸದಸ್ಯ ಶೇಖರ್ ಪೂಜಾರಿ ಸುದ್ದಿಗೋಷ್ಠಿಯಲ್ಲಿದ್ದರು.